ಬೆಂಗಳೂರು: ಮಂಗಳೂರು–ಉಡುಪಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-66 ಮತ್ತು ಕರಾವಳಿ ಕರ್ನಾಟಕದ ಇತರೆ ಭಾಗಗಳ ಮುಖ್ಯರಸ್ತೆಗಳಲ್ಲಿ ಸುರಕ್ಷಿತ ವಾಹನ ಸವಾರಿ ಮತ್ತು ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ(ಎನ್ಹೆಚ್ಎಐ) ಹೈಕೋರ್ಟ್ ನಿರ್ದೇಶನ ನೀಡಿದೆ.
ಎಸ್.ಆಕಾಶ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿ ಅರ್ಜಿ ಇತ್ಯರ್ಥಪಡಿಸಿತು.
ಅರ್ಜಿದಾರರ ವಾದ ಪರಿಗಣಿಸಿದ ನ್ಯಾಯಪೀಠ, ಪರಿಶೀಲಿಸಿ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೇರಿದಂತೆ ಇತರೆ ಪ್ರತಿವಾದಿಗಳಿಗೆ ನಿರ್ದೇಶನ ನೀಡಿದೆ.
ಮಂಗಳೂರು, ಉಡುಪಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ- 66 ಹಾಗೂ 275 ಸೇರಿದಂತೆ ಕರಾವಳಿ ಕರ್ನಾಟಕದ ಇತರೆ ಪ್ರಮುಖ ರಸ್ತೆಗಳಲ್ಲಿ ಸುರಕ್ಷಿತವಾಗಿ ವಾಹನ ಚಲಾಯಿಸಲು ಮತ್ತು ವೈಜ್ಞಾನಿಕವಾಗಿ ನಿರ್ವಹಿಸಲು ಪ್ರತಿವಾದಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದು ಸಂವಿಧಾನದ 19(1)(ಡಿ) ಮತ್ತು 21ನೇ ವಿಧಿಯ ಲಭ್ಯವಿರುವ ನಾಗರೀಕರ ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ಅರ್ಜಿದಾರರು ತಿಳಿಸಿದ್ದರು.
ರಸ್ತೆ ಅಭಿವೃದ್ಧಿ ಯೋಜನೆಯ ಕೈಗೆತ್ತಿಕೊಂಡಿರುವವರು, ಗುತ್ತಿಗೆದಾರರು, ಕ್ಯಾರೇಜ್ ರಸ್ತೆ ಮಾರ್ಗಗಳು, ಸರ್ವೀಸ್ ರಸ್ತೆಗಳು, ಪಾದಚಾರಿ ಕ್ರಾಸಿಂಗ್‌ಗಳು ಮತ್ತು ಮೂಲಸೌಕರ್ಯಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ವೈಜ್ಞಾನಿಕ ರೀತಿಯಲ್ಲಿ ಮತ್ತು ಶಾಶ್ವತ ದುರಸ್ತಿ ಮತ್ತು ನಿರ್ವಹಣೆಯನ್ನು ಕಟ್ಟುನಿಟ್ಟಾಗಿ ಸೂಕ್ತ ಮಾನದಂಡಗಳು ಮತ್ತು ಉತ್ತಮ ಇಂಜಿನಿಯರಿಂಗ್ ಪದ್ದತಿಗಳನ್ನು ಪಾಲನೆ ಮಾಡುತ್ತಿಲ್ಲ. ಹಾಗಾಗಿ ಎಲ್ಲಾ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ನಿಯಮಗಳನ್ನು ಪಾಲನೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ್ದರು.
Share